ಹಾಸನ: ತಾಲೂಕಿನ ಹೆಚ್ಚುವರಿ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ಶಿಕ್ಷಕರು ನಗರದ ಬಿಇಒ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಇಲಾಖೆ ವಿರುದ್ಧ ಶಿಕ್ಷಕರು ಘೋಷಣೆ ಕೂಗುತ್ತಾ ತಮ್ಮ ಅಸಮಾಧಾನ, ಆಕ್ರೋಶ ಹೊರ ಹಾಕಿದರು. ಕೌನ್ಸೆಲಿಂಗ್ ಪ್ರಕ್ರಿಯೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಇಲಾಖೆ ತೆಗೆದುಕೊಂಡ ನಿರ್ಧಾರವು ಶಿಕ್ಷಕರ ಜೀವನದಲ್ಲಿ ಅಶಾಂತಿ ಉಂಟುಮಾಡಿದೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಶಿಕ್ಷಕ ಜಯರಾಂ ಮಾತನಾಡಿ, ತಾಲೂಕಿನಲ್ಲಿ ನೂರಾರು ಹೆಚ್ಚುವರಿ ಶಿಕ್ಷಕರಿದ್ದಾರೆ. ಇನ್ನೂ 300ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಹುದ್ದೆಗಳನ್ನು ರದ್ದು ಮಾಡಲಾಗಿದೆ. ಇದು ನಮಗೆ ಬಹಳ ಅನ್ಯಾಯ ಆಗಿದೆ ಎಂದರು