ಮಧುಗಿರಿ ಪುರಸಭೆ ಆವರಣದ ಮಾಲೀಮರಿಯಪ್ಪ ರಂಗಮಂದಿರದಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಯಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಎಸ್. ರಾಧಾಕೃಷ್ಣನ್ ಅವರ 138ನೇ ಜನ್ಮದಿನಾಚರಣೆ ಹಾಗೂ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಭವ್ಯವಾಗಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು, “ಉತ್ತಮ ಸಮಾಜ ನಿರ್ಮಾಣ ಮಾಡುವ ಮೊದಲ ಹಂತವೇ ವಿದ್ಯೆ. ಅದನ್ನು ಕಲಿಸುವ ಶಿಕ್ಷಕರ ಕೊಡುಗೆ ಅಪಾರ. ಸಮಾಜದಲ್ಲಿ ಉತ್ತಮ ವ್ಯಕ್ತಿತ್ವಗಳನ್ನು ರೂಪಿಸಿದವರು ಶಿಕ್ಷಕರೇ. ಇಂತಹ ಅತ್ಯಮೂಲ್ಯ ವೃತ್ತಿ ನಿರ್ವಹಿಸುತ್ತಿರುವ ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೆ ಹೃದಯಪೂರ್ವಕ ಶುಭಾಶಯಗಳು” ಎಂದು ಹೇಳಿದರು.