ಗ್ರಾಮ ಪಂಚಾಯಿತಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ದೇವಾಲಯವಿದ್ದಂತೆ. ಗ್ರಾಮದ ಅಭಿವೃದ್ಧಿಯ ಬಗ್ಗೆ ಪ್ರತಿಯೊಬ್ಬ ಸಾರ್ವಜನಿಕರೂ ಸಹ ಚಿಂತಿಸಿ, ತಮ್ಮ ಪಾಲಿನ ಜವಾಬ್ದಾರಿ, ಕರ್ತವ್ಯ ನಿರ್ವಹಿಸಬೇಕಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದರು. ದಾವಣಗೆರೆ ತಾಲ್ಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಂಸಾಗರ ಗ್ರಾಮದಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಸಬಲೀಕರಣಕ್ಕೆ ಸರ್ಕಾರ ಶ್ರಮ ವಹಿಸಿದೆ. ಆಡಳಿತ ವಿಕೇಂದ್ರೀಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಶಕ್ತಿ ತುಂಬಲಾಗಿದೆ. ಗ್ರಾಮ ಪಂಚಾಯಿತಿಗಳ ಉತ್ತಮ ಕಾರ್ಯ ನಿರ್ವಹಣೆಗೆ ಅನುಕೂಲವಾಗಲು ಸುಸಜ್ಜಿತ ಕಟ್ಟಡ ಒದಗಿಸಲು ಗಮನ ನೀಡಲಾಗಿದೆ ಎಂದರು.