ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಆರೋಪಿಸಿದರು. ಘಟನೆಯ ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮಂಡ್ಯ ಜಿಲ್ಲೆಯಲ್ಲಿ ಇಷ್ಟು ದೊಡ್ಡಮಟ್ಟದಲ್ಲಿ ಇಂಥ ಕೆಟ್ಟ ಘಟನೆಗಳು ನಡೆಯಲು ಕಾಂಗ್ರೆಸ್ ಸರಕಾರವೇ ಕಾರಣ ಎಂದು ದೂರಿದರು. ಶಾಂತಿ ನೆಮ್ಮದಿಗೆ ಹೆಸರಾಗಿದ್ದ ಮಂಡ್ಯ ಜಿಲ್ಲೆಗೆ ಬೆಂಕಿ ಹಚ್ಚುವ ಕೆಲಸವಾಗುತ್ತಿದೆ. ಹಿಂದೆಂದೂ ಈ ಜಿಲ್ಲೆಯಲ್ಲಿ ಇಂಥ ಘಟನೆಗಳು ಆಗಿಲ್ಲ ಎಂದರು.