ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಶಿಕ್ಷಕಿಯೊಬ್ಬರಿಗೆ ₹ 22.40 ಲಕ್ಷ ಸುಲಿಗೆ ಮಾಡಿದ್ದ ಪ್ರಕರಣದಲ್ಲಿ ಆರ್ಥಿಕ, ಸೈಬರ್ ಠಾಣೆಯ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹೊಸಳ್ಳಿ ಗ್ರಾಮದ ನಿವಾಸಿ ಮಧುಕುಮಾರ್ (38) ಬಂಧಿತ. ಆರೋಪಿಯಿಂದ 16 ಬ್ಯಾಂಕ್ ಖಾತೆಗಳ ಮಾಹಿತಿ ದೊರೆತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ, ಬೇಲೂರು ತಾಲ್ಲೂಕಿನ ಕೊರಟಿಕೆರೆ ಗ್ರಾಮದ ಅರುಣ್ ಕುಮಾರ್ (35) ಎಂಬುವರನ್ನು ಈಚೆಗೆ ಪೊಲೀಸರು ಬಂಧಿಸಿದ್ದರು. ಪ್ರಕರಣದ ಎ1 ಆರೋಪಿ ಆಶ್ರಫ್ ಪತ್ತೆಗೆ ಬಲೆ ಬೀಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಶನಿವಾರ ರಾತ್ರಿ 10 ಗಂಟೆಗೆ ಪ್ರಕಟಣೆ ಮೂಲಕ ತಿಳಿಸಿದೆ.