ನಗರದ ಪತ್ರಿಕಾಭವನದಲ್ಲಿ ಬುಧವಾರ ಮಧ್ಯಾಹ್ನ 2ಕ್ಕೆ ಪತ್ರಿಕಾಗೋಷ್ಠಿ ನಡೆಸಿದ ಅವರು ಸಂಪನ್ಮೂಲ ಮತ್ತು ಸಿಬ್ಬಂದಿ ಕೊರತೆಯ ನಡುವೆಯೂ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್) ಸಾರ್ವಜನಿಕರಿಗೆ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆ ನೀಡಲು ಬದ್ಧವಾಗಿದೆ. ಸಂಸ್ಥೆಯು ಪ್ರಸ್ತುತ ಬೋಧನಾ ಆಸ್ಪತ್ರೆಯಾಗಿ ಬಳಸುತ್ತಿರುವ 1979ರಲ್ಲಿ ನಿರ್ಮಿಸಿದ ಜಿಲ್ಲಾ ಆಸ್ಪತ್ರೆಯ ಕಟ್ಟಡವು ಅಪಾಯಕಾರಿ ಸ್ಥಿತಿಯಲ್ಲಿದೆ. ಕಟ್ಟಡದ ಸೀಲಿಂಗ್ ಕಳಚಿ ಬೀಳುವಂತಹ ಘಟನೆಗಳು ನಡೆಯುತ್ತಿದ್ದು, ಲೋಕೋಪಯೋಗಿ ಇಲಾಖೆಯು ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ, 198 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಹೊಸ ಆಸ್ಪತ್ರೆ ಕಟ್ಟಡಕ್ಕೆ ಎಲ್ಲಾ ಸೌಲಭ್ಯಗಳನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ.