
14 ದಿನಗಳ ಸಾವು-ಬದುಕಿನ ಹೋರಾಟ ಅಂತ್ಯ; ಶಾಲೆಯಲ್ಲಿ ನಡೆದ ಜಗಳದ ಬಳಿಕ 10 ವರ್ಷದ ಬಾಲಕಿ ಸಾವು!
ಉತ್ತರ ಪ್ರದೇಶ: ಶಾಲೆಯಲ್ಲಿ ನಡೆದ ವಿದ್ಯಾರ್ಥಿಗಳ ನಡುವಿನ ಜಗಳವೊಂದು ದುರಂತ ಅಂತ್ಯ ಕಂಡಿದೆ. ಐದನೇ ತರಗತಿಯ ವಿದ್ಯಾರ್ಥಿಯೊಂದಿಗೆ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆರನೇ ತರಗತಿಯ 10 ವರ್ಷದ ವಿದ್ಯಾರ್ಥಿನಿ ಮಿಸ್ಟಿ, 14 ದಿನಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿ ಕೊನೆಯುಸಿರೆಳೆದಿದ್ದಾಳೆ.
ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ನಯಾಗಾಂವ್ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಅಕ್ಟೋಬರ್ 28ರಂದು ಈ ಘಟನೆ ನಡೆದಿದೆ. ಶಾಲೆಯಲ್ಲಿ ಐದನೇ ತರಗತಿಯ ವಿದ್ಯಾರ್ಥಿಯೊಂದಿಗೆ ಮಿಸ್ಟಿಗೆ ವಾಗ್ವಾದ ಉಂಟಾಗಿದ್ದು, ಬಳಿಕ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗಿದೆ. ಈ ವೇಳೆ ಬಾಲಕಿ ನೆಲಕ್ಕೆ ಬಿದ್ದಿದ್ದು, ಮತ್ತೊಬ್ಬ ವಿದ್ಯಾರ್ಥಿ ಆಕೆಯ ಹೊಟ್ಟೆ ಮತ್ತು ಎದೆಗೆ ಒದ್ದಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಶಾಲೆಯಿಂದ ಮನೆಗೆ ಮರಳಿದ ಬಳಿಕ ಮಿಸ್ಟಿ ನಡೆದ ಘಟನೆಯ ಬಗ್ಗೆ ಪೋಷಕರಿಗೆ ತಿಳಿಸಿದ್ದಾಳೆ. ತಕ್ಷಣ ಕುಟುಂಬಸ್ಥರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೀರತ್ನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಸುಮಾರು 14 ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಮಿಸ್ಟಿ ಐವರು ಸಹೋದರಿಯರಲ್ಲಿ ನಾಲ್ಕನೆಯವಳಾಗಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ತೀವ್ರ ದುಃಖದಲ್ಲಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ಕುಮಾರ್ ಚಾಹಲ್ ತಿಳಿಸಿದ್ದಾರೆ.
ಶಾಲೆಯಲ್ಲಿ ನಡೆದ ಜಗಳವೇ ಮಗಳ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನೆಗೆ ಸಂಬಂಧಿಸಿದ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಶಾಲೆಯಲ್ಲಿ ಜಗಳದ ವೇಳೆ ಹಾಜರಿದ್ದವರಿಂದಲೂ ಪೊಲೀಸರು ಮಾಹಿತಿ ಸಂಗ್ರಹಿಸಲಿದ್ದು, ಮರಣೋತ್ತರ ಪರೀಕ್ಷೆ ವರದಿ ಹಾಗೂ ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
#YadgirNews #UttarPradesh #Baghpat #SchoolIncident #StudentDeath #SchoolFight #10YearOldGirl #TragicNews #BreakingNews #BigNews #PoliceInvestigation #PostmortemReport #StudentSafety #SchoolSafety #ChildSafety #MeerutNews #IndiaNews #LatestNews #KannadaNews #YadgirNewsKannada
Yadgir, Yadgir | Nov 14, 2026