ಹೇರ್ ಕಟಿಂಗ್ ಶಾಪ್ಗೆ ಬಂದ 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ; ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿ!
ಕಾರವಾರ: ಹೇರ್ ಕಟಿಂಗ್ ಮಾಡಿಸಿಕೊಳ್ಳಲು ಸೆಲೂನ್ಗೆ ಬಂದಿದ್ದ 10 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿ ನಡೆದಿದೆ. ಈ ಸಂಬಂಧ ಉತ್ತರ ಪ್ರದೇಶ ಮೂಲದ ಸೆಲೂನ್ ಸಿಬ್ಬಂದಿ ಸಂಶಾದ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನಾಪತ್ತೆ!
ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ತನ್ನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸಂಶಾದ್ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.
ಠಾಣೆ ಎದುರು ಗ್ರಾಮಸ್ಥರ ಪ್ರತಿಭಟನೆ
ಆರೋಪಿಯನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿ ಮಾಜಾಳಿ ಹಾಗೂ ವಾಂಗಡ ಭಾಗದ ಗ್ರಾಮಸ್ಥರು ಚಿತ್ತಾಕುಲ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲಿನ ದೌರ್ಜನ್ಯದ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಆರೋಪಿ ಬಂಧನಕ್ಕೆ ಸಾರ್ವಜನಿಕರ ಆಗ್ರಹ
ಉತ್ತರ ಪ್ರದೇಶ ಮೂಲದ ಆರೋಪಿಯನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆರೋಪಿಯು ಈ ಹಿಂದೆ ಬೇರೆ ಯಾವುದೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆಯೇ ಎಂಬ ಬಗ್ಗೆಯೂ ಪರಿಶೀಲನೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿರುವ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಸದ್ಯ ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
#YadgirNews #KarwarNews #UttaraKannada #ChittakulaPolice #Majali #POCSOCase #POCSOAct #ChildSafety #ChildProtection #ChildAbuseCase #CrimeNews #KarnatakaNews #BreakingNews #PoliceInvestigation #AccusedAbsconding #PoliceAction #JusticeForChildren #CrimeReport #KannadaNews #YadgirNewsKannada