BIG BREAKING NEWS || ಮಾಸ್ಟರ್ ಶಿಶಿರ್ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿ, ಸಹಾಯಹಸ್ತ ಚಾಚಿದ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಿದ ಡಾ.ಯತೀಂದ್ರ ಸಿದ್ದರಾಮಯ್ಯ
ಮೈಸೂರು: ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯನ್ನು ವೀಕ್ಷಿಸಲು ಆಗಮಿಸಿದ್ದ ವೇಳೆ ಪೊಲೀಸ್ ಸಿಬ್ಬಂದಿಯ ಲಾಠಿ ಬೀಸುವಿಕೆಯಿಂದ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬನ್ನಿಮಂಟಪದ ನಿವಾಸಿಗಳಾದ ಶ್ರೀ ನಾಗರಾಜು ಹಾಗೂ ಶ್ರೀಮತಿ ಸೌಮ್ಯ ದಂಪತಿಯ ಪುತ್ರ ಮಾಸ್ಟರ್ ಶಿಶಿರ್ ಅವರನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಆಸ್ಪತ್ರೆಗೆ ಖುದ್ದು ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಿದರು.
ಈ ದುರ್ಘಟನೆಯಿಂದ ಆತಂಕಕ್ಕೊಳಗಾದ ಪೋಷಕರು ಹಾಗೂ ಕುಟುಂಬಸ್ಥರಿಗೆ ಸಚಿವರು ಸಾಂತ್ವನ ಹೇಳಿ, ಧೈರ್ಯ ತುಂಬಿದರು. ಮಗುವಿನ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡ ಅವರು, ಮಗು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಅಲ್ಲದೆ, ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಎಲ್ಲಾ ರೀತಿಯ ಅತ್ಯುತ್ತಮ ವೈದ್ಯಕೀಯ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯ ದೊರೆಯುವಂತೆ ಕ್ರಮ ವಹಿಸುವುದಾಗಿ ತಿಳಿಸಿದರು ಹಾಗೂ ವೈಯಕ್ತಿಕವಾಗಿಯೂ ಧನಸಹಾಯ ಮಾಡಿದರು.
ಸಾರ್ವಜನಿಕರ ರಕ್ಷಣೆಗೆ ಮತ್ತು ಸುವ್ಯವಸ್ಥೆ ಕಾಪಾಡಲು ಇರಬೇಕಾದ ಪೊಲೀಸರಿಂದ ಇಂತಹ ದುರದೃಷ್ಟಕರ ಘಟನೆಗಳು ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿ. ಈ ಘಟನೆಗೆ ಕಾರಣರಾದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕೂಡಲೇ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಯಾವುದೇ ಮುದಾಕ್ಷಿಣೆಯಿಲ್ಲದೆ ಕಠಿಣ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮುಂದಿನ ದಿನಗಳಲ್ಲಿ ಇಂತಹ ಅಚಾತುರ್ಯಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸಚಿವರು ತಿಳಿಸಿದರು.
ಈ ಭೇಟಿಯ ಸಂದರ್ಭದಲ್ಲಿ ಮೈಸೂರು ಜಿಲ್ಲಾಧಿಕಾರಿಗಳಾದ ಶ್ರೀ ಜಿ. ಲಕ್ಷ್ಮೀಕಾಂತ ರೆಡ್ಡಿ ಹಾಗೂ ಮೈಸೂರು ನಗರದ ಪೊಲೀಸ್ ಆಯುಕ್ತರಾದ ಶ್ರೀಮತಿ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.
Yadgir, Yadgir | Oct 22, 2026