ಜಿಲ್ಲೆಯಲ್ಲಿ ಡಿಸೆಂಬರ್ 21ರಿಂದ ಡಿಸೆಂಬರ್ 24ರವರೆಗೆ ನಿಗದಿಯಾದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಶಿಸ್ತುಬದ್ಧವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಹೇಳಿದರು. ಶನಿವಾರ 10ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಎರಡನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ 1132 ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 2,59,984 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.