ಬೆಂಗಳೂರಿನ ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಸುಮಾರು 7 ಗಂಟೆಗೆ, ಯಶವಂತಪುರದಿಂದ ಮಲ್ಲೇಶ್ವರಂ ಕಡೆಗೆ ತೆರಳುತ್ತಿದ್ದ ಕಾರು ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ. ಕಾರಿನ ಎಂಜಿನ್ ನಲ್ಲಿ ಧಿಡೀರ್ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಮಾತ್ರದಲ್ಲಿ ಸುಟ್ಟು ಕರಕಲಾಗಿದೆ. ಕಾರಿನ ಒಳಭಾಗದಿಂದ ಏಕಾಏಕಿ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.