ಶಿರಸಿ : ದಾಂಡೇಲಿಯ ನ್ಯಾಯವಾದಿಯಾಗಿದ್ದ ಅಜಿತ ನಾಯಕರ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪಾಂಡುರಂಗ ಮಾರುತಿ ಕಾಂಬಳೆಗೆ ಮಂಗಳವಾರ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ. ಈ ಬಗ್ಗೆ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಶಿರಸಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಿರಣ ಕಿಣಿ ಅವರು, ಆರೋಪಿಗೆ ಜೀವಾವಧಿ ಶಿಕ್ಷೆಯ ಜೊತೆಗೆ 25 ಸಾವಿರ ರೂ. ದಂಡ, 50 ಸಾವಿರ ರೂ. ಪರಿಹಾರವನ್ನು ಮೃತ ವಕೀಲರ ಕುಟುಂಬಕ್ಕೆ ನೀಡಬೇಕು ಎಂದು ಆದೇಶಿಸಿದ್ದಾರೆ. ಜೊತೆಗೆ, ಹೆಚ್ಚುವರಿ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಸಮಿತಿಯಿಂದ ಪಡೆಯುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ.