ಗುಂಡ್ಲುಪೇಟೆ: ಪಟ್ಟಣದಲ್ಲಿ ರೈತರ ಅಹೋರಾತ್ರಿ ಧರಣಿಗೆ ಆರ್.ಅಶೋಕ್, ಛಲವಾದಿ ಬೆಂಬಲ- ಸದನದಲ್ಲಿ ಧ್ವನಿ ಎತ್ತುವ ಭರವಸೆ
ಗುಂಡ್ಲುಪೇಟೆ ಪಟ್ಟಣದ ತಾಲೂಕು ಕಚೇರಿ ಮುಂದೆ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬೆಂಬಲ ಸೂಚಿಸಿ, ಮುಂದಿನ ಅಧಿವೇಶದಲ್ಲಿ ಧ್ವನಿ ಎತ್ತಿ, ಸಮಸ್ಯೆಗಳನ್ನು ಪರಿಹಾರ ಮಾಡಬೇಕು ಎಂದು ಒತ್ತಾಯಿಸುವುದಾಗಿ ಭರವಸೆ ನೀಡಿದರು. ತಾಲೂಕು ಕಚೇರಿ ಮುಂದೆ ಕಳೆದ 22 ದಿನಗಳಿಂದ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ನಡೆಸುತ್ತಿರುವ ರೈತರಿಂದ ಬುಧವಾರ ಮನವಿ ಸ್ವೀಕರಿಸಿ ಮಾತನಾಡಿ, ಕೆರೆಗಳಿಗೆ ನೀರು ತುಂಬಿಸುವುದು ಸೇರಿದಂತೆ ನಿಮ್ಮ ನ್ಯಾಯಯುತ ಬೇಡಿಕೆಗಳು ಹೋರಾಟ ಮಾಡಬೇಕಾದ ವಿಷಯವೇ ಅಲ್ಲ. ಇದಕ್ಕೆ ಸರ್ಕಾರ ಮನಸ್ಸು ಮಾಡಬೇಕು ಎಂದರು.