ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ಮಾನ್ಯ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದೆ.