ಆಳಂದ ಪಟ್ಟಣದ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ 2025-26ನೇ ಸಾಲಿನ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಮಂಗಳವಾರ 11 ಗಂಟೆಗೆ ಭರ್ಜರಿ ಚಾಲನೆ ದೊರೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಿ.ಆರ್. ಪಾಟೀಲ್, ವಿದ್ಯಾರ್ಥಿಗಳಲ್ಲಿನ ಮೂಲ ಪ್ರತಿಭೆಗಳನ್ನು ಗುರುತಿಸಿ ಉತ್ತೇಜನ ನೀಡುವುದು ಶಾಲೆಗಳ ಹೊಣೆಗಾರಿಕೆ ಎಂದು ಹೇಳಿದರು. ನೃತ್ಯ, ಸಂಗೀತ, ನಾಟಕ, ಚಿತ್ರಕಲೆ, ವಾದವಿವಾದ, ಕ್ವಿಜ್ ಸೇರಿದಂತೆ ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳು ತಮ್ಮ ಕೌಶಲ್ಯ ಪ್ರದರ್ಶಿಸಿದರು.