ಮಾಸ್ಕ್ ರಸ್ತೆ ಮತ್ತು ಎಮ್.ಎಮ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರು ನಿರ್ದೇಶಿಸಿದರು. ಗುರುವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಪುಲಕೇಶಿ ನಗರ ವಿಭಾಗದ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಆಯುಕ್ತರು, ಮಾಸ್ಕ್ ರಸ್ತೆ ಮತ್ತು ಎಮ್.ಎಮ್ ರಸ್ತೆಯ ಪಾದಚಾರಿ ಮಾರ್ಗದ ನಿರ್ಮಾಣ ಹಾಗೂ ದುರಸ್ತಿ ಕಾರ್ಯವನ್ನು ಜನವರಿ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.