ಅಂಕೋಲಾ: ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನ ಬಾಗಿಲು ಬಳಿ ಮಿಥೇನಾಲ್ ಸಾಗಿಸುತ್ತಿದ್ದ ಟ್ಯಾಂಕರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಮುಂಬೈದಿಂದ ಹುಬ್ಬಳ್ಳಿ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಟ್ಯಾಂಕರ್ ಹೆದ್ದಾರಿ ಬದಿ ಪಲ್ಟಿಯಾಗಿದೆ. ರಾಸಾಯನಿಕ ಅನಿಲ ಸೋರಿಕೆಯ ಶಂಕೆಯಿಂದ ಸುತ್ತಮುತ್ತಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಾಹನ ಸವಾರರಿಗೂ ಕೂಡಾ ಪೊಲೀಸರು ಎಚ್ಚರಿಕೆ ನೀಡಿದ್ದು, ಸದ್ಯ ಹೆದ್ದಾರಿಯಲ್ಲಿ ಸಂಚಾರ ನಿಷೇಧಿಸಲಾಗಿದೆ. ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತ ತಂಡ ಸ್ಥಳಕ್ಕೆ ಭೇಟಿನೀಡಿದ್ದು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಂಡಿದ್ದಾರೆ.