ಬೆಂಗಳೂರು ದಕ್ಷಿಣ: ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಕೆಶಿ ಗರಂ
ಬೆಂಗಳೂರಿನ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಿ ದೊಡ್ಡ ಮಟ್ಟಕ್ಕೆ ಬೆಳೆದವರು ಈಗ ಬೆಂಗಳೂರಿನ ಬಗ್ಗೆ ಟೀಕೆ ಮಾಡಿ ಟ್ವೀಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದಾರೆ. ಭಾನುವಾರ ಬೆಂಗಳೂರಿನ ಕೋರಮಂಗಲದ ವೀರ ಯೋಧ ಉದ್ಯಾನವನದಲ್ಲಿ ಹಮ್ಮಿಕೊಂಡಿದ್ದ ‘ಬೆಂಗಳೂರು ನಡಿಗೆ’ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು. ಬೆಂಗಳೂರಿನ ಘನತೆಗೆ ಚ್ಯುತಿ ತರುತ್ತಿರುವವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಅವರು, ಬೆಂಗಳೂರಿಗೆ ಬಂದು ಬೆಳೆದಿರುವವರು ಹಿಂದೆ ಹೇಗಿದ್ದೆವು, ಪ್ರಸ್ತುತ ಹೇಗಿದ್ದೇವೆ ಎಂಬುದನ್ನು ಮರೆತು ಟ್ವೀಟ್ ಮಾಡುತ್ತಿದ್ದಾರೆ. ನಾವು ನಮ್ಮ ಮೂಲವನ್ನು ಮರೆಯಬಾರದು ಎಂದರು.